ರಾಯಚೂರು. ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಲು ಕರೆದುಕೊಂಡು ಹೋಗುತ್ತಿದ್ದ 06 ವಾಹನಗಳ ಮಾಲೀಕರು ಹಾಗೂ ಚಾಲಕರ ವಿರುದ್ಧ ಕ್ರಮ ವಹಿಸಲಾಗಿದೆ.
ಜ.06ರ ಸೋಮವಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ ಮತ್ತು ಪೊಲೀಸ್ ಇಲಾಖೆಯಿಂದ ಹಠಾತ್ ದಾಳಿ ನಡೆಸಿ 36 ಮಕ್ಕಳನ್ನು ರಕ್ಷಿಸಿ ಮಕ್ಕಳು ಓದುತ್ತಿದ್ದ ಶಾಲೆಗಳಿಗೆ ಪುನಃ ದಾಖಲಿಸಲಾಗಿದೆ.
ದೇವದುರ್ಗ ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ದೇವದುರ್ಗ ಟ್ರಾಫಿಕ್ ಪಿ.ಎಸ್.ಐ, ನಾರಾಯಣ, ಎ.ಎಸ್.ಐ ಗೋಪಾಲ, ಶಿಕ್ಷಣ ಇಲಾಖೆಯ ಇ.ಸಿ.ಓಗಳಾದ ರಾಜನಗೌಡ, ಮಹಾದೇವಪ್ಪ, ಬಿ.ಆರ್.ಪಿಗಳಾದ ಶರಣಪ್ಪ, ಸುರೇಶ, ಟಿ.ಎ.ಮನೋಹರ ಶಾಸ್ತ್ರಿ ಹಾಗೂ ಸಿ.ಆರ್.ಪಿಗಳಾದ ಮಹಾದೇವಪ್ಪ, ಬಾಬು ಹಡಗಲಿ, ಬಸವರಾಜ್, ವೀರಭದ್ರಯ್ಯ, ವೆಂಕಟಾಂಜನೇಯ, ಅಂಬಣ್ಣ ಮದಾಳೆ ಸೇರಿದಂತೆ ಇನ್ನೀತರರು ಜಿಲ್ಲೆಯ ದೇವದುರ್ಗದ ಹೊರವಲಯದ ಸಿರವಾರ ಕ್ರಾಸ್ ಹಾಗೂ ಕೊಪ್ಪರ ಕ್ರಾಸ್ ಸೇರಿದಂತೆ ಇತರೆ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ರಕ್ಷಿಸಿ ಉತ್ತಮ ಕಾರ್ಯ ಮಾಡಿದ್ದಾರೆ.
ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ನಿರ್ದೇಶಕರಾದ ಮಂಜುನಾಥ ರೆಡ್ಡಿ ಮಾತನಾಡಿ, 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ವರ್ಷ ಮೇಲ್ಪಟ್ಟು 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ವೃತ್ತಿ ಮತ್ತು ಪ್ರಕ್ರಿಯೆಗಳಲ್ಲಿ ನಿಷೇಧಿಸಲಾಗಿದ್ದು, ಒಂದು ವೇಳೆ ಕೆಲಸಕ್ಕೆ ನೇಮಿಸಿಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದರು.
ಮಕ್ಕಳನ್ನು ಶಾಲೆ ಬಿಡಿಸಿ, ಸರಕು ಸಾಗಾಣಿಕೆ ವಾಹನಗಳಲ್ಲಿ ಸಾಗಾಣಿಕೆ ಮಾಡಿಕೊಂಡು ಹೋಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಬಾರದು. ಒಂದು ವೇಳೆ ಇದೇ ರೀತಿ ಮುಂದುವರೆದಲ್ಲಿ ಪೊಲೀಸ್ ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಇನ್ನು ಹೆಚ್ಚಿನ ಕಠಿಣ ಕ್ರಮಕೈಗೊಳ್ಳುತ್ತಾರೆ ಎಂದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ. ದಂಡ ಹಾಗೂ 2 ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098 ಗೆ ಮಾಹಿತಿ ನೀಡಬಹುದಾಗಿದೆ ಎಂದರು.