ರಾಯಚೂರು,ಜು.20- ಜಿಲ್ಲೆಯಲ್ಲಿ ಮಕ್ಕಳ ರೋಗ ನಿರೋಧಕ ವ್ಯಾಪ್ತಿಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶದಿಂದ ಮಿಷನ್ ಇಂದ್ರಧನುಷ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಜು.20ರ(ಗುರುವಾರ) ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಿಷನ್ ಇಂದ್ರಧನುಷ್ ತೀವ್ರಗೊಳಿಸುವಿಕೆ ಮತ್ತು ದಡಾರ ಮತ್ತು ರುಬೆಲ್ಲಾ ನಿಮೂರ್ಲನೆಗಾಗಿ ಹಮ್ಮಿಕೊಂಡಿದ್ದ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ಗರ್ಭಿಣಿ ಮಹಿಳೆಯರು ಮತ್ತು ಹುಟ್ಟಿನಿಂದ 5 ವರ್ಷದವರೆಗಿನ ಮಕ್ಕಳ ಮಾಹಿತಿಯನ್ನು ಪಡೆದುಕೊಂಡು ಮಾಹಿತಿಯನ್ವಯ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆಯಬೇಕಾಗಿರುವ, ಪಡೆಯದೇ ಇರುವ ಮತ್ತು ಬಿಟ್ಟು ಹೋಗಿರುವ ಪಟ್ಟಿಯನ್ನು ತಯಾರಿಸಿಕೊಂಡು ಪರಿಶೀಲಿಸಬೇಕು, ಗರ್ಭಿಣಿ ಮಹಿಳೆಯ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ತಾಯಂದಿರ ಸಭೆಗಳಲ್ಲಿ ಅಭಿಯಾನದ ಕುರಿತು ಜಾಗೃತ ಮೂಡಿಸಬೇಕು ಎಂದರು.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿನ ಹೆಚ್ಚು ಆರೋಗ್ಯ ಅಪಾಯದಂಚಿನಲ್ಲಿರುವ ಪ್ರದೇಶಗಳನ್ನು ಗುರುತಿಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಲಸಿಕೆ ನಿರಾಕರಿಸುವ ಕುಟುಂಬಗಳನ್ನು ಮನವೋಲಿಸಿ ಲಸಿಕಾಕರಣವನ್ನು ಯಶಸ್ವಿಗೊಳಿಸುವಲ್ಲಿ ಕಾರ್ಯನಿರ್ವಹಿಸಬೇಕು ಎಂದರು.
ಇದೇ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಎಲ್ಲಾ ಶಾಲೆಗಳಲ್ಲಿ ಇಂದ್ರಧನುಷ್ ಅಭಿಯಾನದ ಕುರಿತು ಜಾಗೃತಿ ಮೂಡಿಸುವುದಲ್ಲದೇ ಖಾಸಗಿ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಇಂದ್ರಧನುಷ 5.0 ಕಾರ್ಯಕ್ರಮದಲ್ಲಿ ಲಸಿಕೆ ಕೊಡಿಸಲು ಪೋಷಕರಿಗೆ ಪ್ರೇರೇಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿ ಡಾ.ಅನಿಲ್‌ಕುಮಾರ ತಾಳಿಕೋಟೆ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಶಸ್ತ್ರ ಚಕಿತ್ಸಕ ಡಾ.ವಿಜಯಶಂಕರ, ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೃಷಬೇಂದ್ರಯ್ಯ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಗಣೇಶ, ತಾಲೂಕು ವೈದ್ಯಾಧಿಕಾರಿ ಡಾ.ಶಖೀರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಜಿಲ್ಲಾಡಳಿತದಿಂದ ಇಂದ್ರಧನುಷ 5.0 ಅಭಿಯಾನದ ಪೋಸ್ಟರ್ ಬಿಡುಗಡೆ:
ಜಿಲ್ಲಾಡಳಿತದಿಂದ ಇಂದ್ರಧನುಷ 5.0 ಅಭಿಯಾನದ ಪೋಸ್ಟರ್ ಬಿಡುಗಡೆ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಿಲಾಖೆಯ ವತಿಯಿಂದ ಜು.20ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದ್ರಧನುಷ್ 5.0 ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆ ಮಾಡಲಾಯಿತು.