ರಾಯಚೂರು: ವೈದ್ಯಕೀಯ ಶಿಕ್ಷ ಇಲಾಖೆಯ ಸಚಿವನಾಗಿ ಹೇಳುತ್ತಿದ್ದೇನೆ ಏಮ್ಸ್ ಅನ್ನು ರಾಯಚೂರು ಜಿಲ್ಲೆಗೆ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ಜಿಲ್ಲಾ ಉಸ್ತವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.
ಸಿಂಧನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಏಮ್ಸ್ ಸ್ಥಾಪನೆಗೆ ಕಲಬುರ್ಗಿ ಹಾಗೂ ರಾಯಚೂರು ಜಿಲ್ಲೆಯ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ರಾಯಚೂರು ಜಿಲ್ಲೆಯ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದ್ದು, ಮುಖ್ಯಮಂತ್ರಿಗಳು ಕೂಡ ಕೇಂದ್ರಕ್ಕೆ ಬರೆದ ಪತ್ರದಲ್ಲಿ ರಾಯಚೂರು ಜೆಲ್ಲೆಯ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಿದ್ದಾರೆ. ಕೂಡಲೇ ಕೇಂದ್ರಕ್ಕೆ ನಿಯೋಗ ತೆರಳಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಸರ್ಕಾರದ ಮೊದಲ ಆಧ್ಯತೆಯಾಗಿದ್ದು, ಆಯಾ ಇಲಾಖೆಯ ಕಾರ್ಯಕ್ರಮಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಲಾಗುತ್ತದೆ. ಪಾರದರ್ಶಕ ಆಡಳಿತ ಹಾಗೂ ಭ್ರಷ್ಟಾಚಾರ ರಹಿತ ಸರ್ಕಾರವನ್ನು ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪೂರ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ, ಎಸ್.ಪಿ ನಿಖಿಲ್.ಬಿ, ಲಿಂಗಸುಗೂರು ಸಹಾಯಕ ಆಯುಕ್ತ ಶಿಂಧೆ ಅವಿನಾಶ ಸೇರಿದಂತೆ ಇನ್ನಿತರರು ಉಪಸಥಿತರಿದ್ದರು.