ರಾಯಚೂರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ, ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಅಗತ್ಯವಿದ್ದಲ್ಲಿ ಬೋರ್‌ವೆಲ್‌ಗಳು ಹಾಗೂ ಅಗತ್ಯವಿದ್ದಲ್ಲಿ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡುವಂತೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ತಾಲೂಕುಗಳ ತಹಶೀಲ್ದಾರ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಬೋರ್‌ವೆಲ್‌ಗಳ ಸ್ಥಳವನ್ನು ನಿಗದಿಪಡಿಸಿ ಖಾಸಗಿ ಬೋರ್‌ವೆಲ್ ಮಾಲಿಕರೊಂದಿಗೆ ಬಾಡಿಗೆ ಒಪ್ಪಂದವನ್ನು ಸಿದ್ದಪಡಿಸಿಕೊಳ್ಳಬೇಕು ಒಂದು ವೇಳೆ ನೀರಿನ ಸಮಸ್ಯೆ ಹೆಚ್ಚಾದಲ್ಲಿ ಬಾಡಿಗೆ ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು ಮಾಡಬೇಕು ಎಂದು ತಿಳಿಸಿದರು.
ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲು ಟೆಂಡರ್ ಕರೆಯಬೇಕು. ಸ್ಥಳೀಯ ಟ್ಯಾಂಕರ್‌ಗಳಿಗೆ ಹೆಚ್ಚಿನ ಆಧ್ಯತೆ ನೀಡಬೇಕು ಮತ್ತು ನೀರಿನ ಮೂಲವು ಹತ್ತಿರವಿರುವಂತೆ ಗಮನಹರಿಸಬೇಕು ಎಂದು ತಿಳಿಸಿದರು.
ಬಾಕಿ ಇರುವ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಜಲದಾರೆ ಯೋಜನೆಯಡಿ ಮನೆ ಮನೆಗೆ ನೀರನ್ನು ಒದಗಿಸುವಂತೆ ಸೂಚಿಸಿದರು.