ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ
ರಾಯಚೂರು: ಮಾ.24- ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷಿಯಿಂದ ಬಾಯಾರಿಕೆ ಹಾಗೂ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಓಆರ್.ಎಸ್. ಸೇರಿದಂತೆ ಇನ್ನೀತರ ಅಗತ್ಯ ಸೌಲಭ್ಯ ಒದಗಿಸಿರುವದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮೆಚ್ಚುಗೆ ವ್ಯಕಪಡಿಸಿದ್ದಾರೆ.
ನಗರದ ಟ್ಯಾಗೋರ್ ಮೆಮೋರಿಯಲ್ ಶಾಲೆ, ಮಲ್ಯಾಬಾದ್, ಯರಗೇರಾ ಗ್ರಾಮದ ಸರಕಾರಿ ಪ್ರೌಢ ಶಾಲೆಗಳಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಿಗೆ ರಾಯಚೂರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪಾಂಡ್ವೆ ರಾಹುಲ್ ತುಕಾರಾಮ ರವರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಗಣಿತ ಪರೀಕ್ಷೆ ನಿಮಿತ್ತ ನಗರದ ಟ್ಯಾಗೋರ್ ಮೆಮೋರಿಯಲ್ ಶಾಲೆ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಒಟ್ಟು 371 ನೊಂದಾಯಿತ ಅಭ್ಯರ್ಥಿಗಳ ಪೈಕಿ 366 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಕೇಂದ್ರದ ಮುಖ್ಯಸ್ಥರಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತರಗತಿ ವಾರು ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ವೆಬ್ ಕಾಸ್ಟಿಂಗ್ ಕೊಠಡಿಗೆ ಭೇಟಿ ನೀಡಿ ಪರೀಕ್ಷಾ ಕೊಠಡಿಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಯುತ್ತಿರುವ ಬಗ್ಗೆ ಪರಿಶೀಲಿಸಿದರು.
ರಾಯಚೂರು ಗ್ರಾಮೀಣ ಪ್ರದೇಶದ ಮಲ್ಯಾಬಾದ್ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿ 277 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿರುವುದು ಹಾಗೂ ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೂ ಸಿಸಿ ಕ್ಯಾಮೆರಾದ ವ್ಯವಸ್ಥೆ ಕಲ್ಪಿಸಿರುವುದನ್ನು ಪರಿಶೀಲಿಸಿದರು.
ಯರಗೇರಾ ಪ್ರೌಢ ಶಾಲೆಯಲ್ಲಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ 383 ವಿದ್ಯಾರ್ಥಿಗಳ ಪೈಕಿ ಅತಿ ಹೆಚ್ಚು 60 ವಿದ್ಯಾರ್ಥಿಗಳು ಗೈರು ಆಗಿರುವ ಬಗ್ಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರೊಂದಿಗೆ ವಿಚಾರಿಸಲಾಯಿತು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು/ಕರ್ತವ್ಯನಿರತ ಅಧಿಕಾರಿಗಳು ಹಾಗೂ ಇನ್ನಿತರ ಸಿಬ್ಬಂದಿಗಳು ಹಾಜರಿದ್ದರು.