ಬೆಳಗಾವಿ : ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಹಾಗೂ ವಿಮಾನ ನಿಲ್ದಾಣವನ್ನ ಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಘೋಷಣೆ ಮಾಡಿರುವುದಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಯಚೂರಿನಲ್ಲಿ ಹತ್ತಿ ಉತ್ಪಾದನೆಯು ಹೆಚ್ಚಾಗಿದೆ. ಈ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿ ಹಾಗೂ ಉದ್ಯೋಗ ಅವಕಾಶ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಮಾನ್ಯ ಕೈಗಾರಿಕಾ ಸಚಿವರಾದ ಎಂಬಿ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ರಾಯಚೂರು ಜಿಲ್ಲೆಯ ಕೈಗಾರಿಕೋದ್ಯಮಿಗಳೊಂದಿಗೆ ಸಭೆಯನ್ನು ನಡೆಸಲಾಗಿತ್ತು. ಆ ಸಂಧರ್ಭದಲ್ಲಿ ರಾಯಚೂರು ಜಿಲ್ಲೆಯ ಅಭಿವೃದ್ಧಿ ಗೆ ಅಗತ್ಯವಿರುವ ಮನವಿಯನ್ನು ಸಲ್ಲಿಸಲಾಗಿತ್ತು. ಈ ಮನವಿಗಳಿಗೆ ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದ ಕಾಂಗ್ರೆಸ್ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ರಾಯಚೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿರುವುದು ಬಹಳ ಸಂತಸವಾಗಿದೆ.
ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಬದ್ಧವಾಗಿದ್ದು, ಹತ್ತಿ ಬೆಳೆಗಾರರು ಹಾಗೂ ಯುವ ಜನಾಂಗದವರಿಗೆ ಉತ್ತಮ ಅವಕಾಶ ದೊರೆಯಲಿದೆ. ಇಂತಹ ಉತ್ತಮ ಘೋಷಣೆಗಳನ್ನು ಮಾಡಿರುವುದು ಸ್ವಾಗತಾರ್ಹ ಇದಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.