Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಕೆಕೆಆರ್‌ಡಿಬಿ ಕ್ರಿಯಾ ಯೋಜನೆ ತ್ವರಿತವಾಗಿ ಅನುಷ್ಠಾನಕ್ಕೆ ಸಿಎಂ ಸೂಚನೆ

ಕೆಕೆಆರ್‌ಡಿಬಿ ಕ್ರಿಯಾ ಯೋಜನೆ ತ್ವರಿತವಾಗಿ ಅನುಷ್ಠಾನಕ್ಕೆ ಸಿಎಂ ಸೂಚನೆ

ಬೆಂಗಳೂರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರನ್ನು ಒಳಗೊಂಡಂತೆ ಅಧಿಕಾರಿಗಳೊಂದಿಗೆ ಮಂಡಳಿಯ ಕಾಮಗಾರಿಗಳ ಬಗ್ಗೆ ಗೃಹ ಕಚೇರಿ ಕೃಷ್ಣದಲ್ಲಿ  ಪ್ರಗತಿ ಪರಿಶೀಲನೆ ನಡೆಸಿದರು.

ಮಂಡಳಿಯಲ್ಲಿ ಪ್ರಸ್ತುತ 2,106 ಕೋಟಿ ರು. ಲಭ್ಯವಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರು. ವೆಚ್ಚ ಮಾಡಲಾಗಿದೆ. ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ 1,000 ಕೋಟಿ ರು. ವೆಚ್ಚವಾಗುವ ಸಾಧ್ಯತೆಗಳಿವೆ. ಹೀಗಾಗಿ, ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ, ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಬೇಕು. ನಿಧಾನಗತಿಯಲ್ಲಿರುವ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್‌ ಅಂತ್ಯದ ಒಳಗೆ ರೂಪಿಸಬೇಕು. ಎಸ್‌.ಸಿ.ಎಸ್‌.ಪಿ / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.50ಕ್ಕೂ ಹೆಚ್ಚು ಇರುವ ಸ್ಥಳಗಳನ್ನು ಅಭಿವೃದ್ಧಿಪಡಿಸಬೇಕು. ಪ್ರಗತಿಯಲ್ಲಿರುವ ಕೆಲಸಗಳನ್ನು ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ, ಜಮೀರ್ ಅಹಮದ್ ಖಾನ್, ಶರಣಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಗಡಗಿ, ಎನ್‌.ಎಸ್. ಬೋಸರಾಜು, ರಹೀಂ ಖಾನ್, ಡಿ. ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್. ಪಾಟೀಲ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಸಭೆಯಲ್ಲಿ ಭಾಗವಹಿಸಿದ್ದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Megha News