ಬೆಂಗಳೂರು.ತಮಿಳುನಾಡಿಗೆ ಕಾವೇರಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾ ಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮುಂದಿನ ನಿರ್ಧಾರದ ಬಗ್ಗೆ ಸಲಹೆಯನ್ನು ನೀಡಲಾಯಿತು.
ಜುಲೈ 12 ರಿಂದ ಜುಲೈ 31 ರ ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 TMC (ಸರಾಸರಿ 11,500 ಕ್ಯೂಸೆಕ್‌ಗಳ ಹರಿವು) ಇರುವಂತೆ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಮಾಡಿದೆ. ಇದರಿಂದ ರಾಜ್ಯಕ್ಕೆ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲು ಸರ್ವಪಕ್ಷಗಳ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿದರು.
ಈ ಸಂದರ್ಭದಲ್ಲಿ ಡಿ ಸಿ ಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಕೃಷಿ ಇಲಾಖೆ ಸಚಿವ ಚೆಲುವನಾರಾಯಣ ಸ್ವಾಮಿ, ಹೆಚ್ ಸಿ ಮಹಾದೇವಪ್ಪ ಸೇರಿದಂತೆ ಅನೇಕ ಸಚಿವರು, ಶಾಸಕರು ಉಪಸ್ಥಿತರಿದ್ದರು.