ರಾಯಚೂರು:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಸಾರ್ವಜನಿಕರಿಗೆ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಲು ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ವ್ಯಂಗ್ಯ ಚಿತ್ರಗಳ ಪ್ರದರ್ಶನಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಎಂ.ಎಸ್ ಹಾಗೂ ರಾಯಚೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಅವರು ಚಾಲನೆ ನೀಡಿದರು.
ಜಿಲ್ಲೆಯ ವ್ಯಂಗ್ಯ ಚಿತ್ರ ಕಲಾವಿದರಾದ ಈರಣ್ಣ ಬೆಂಗಾಲಿ ಅವರು ಬಿಡಿಸಿದ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ವಿವಿಧ ವ್ಯಂಗ್ಯಚಿತ್ರಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿತ್ತು. ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ಜನರಿಗೆ ವ್ಯಂಗ್ಯ ಚಿತ್ರಗಳ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾನವಿಧಿಯನ್ನು ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ನೊಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ಮತದಾರರ ಸಾಕ್ಷರತಾ ಕ್ಲಬ್‌ನ ದಂಡಪ್ಪ ಬಿರಾದಾರ, ವ್ಯಂಗ್ಯ ಚಿತ್ರ ಕಲಾವಿದ ಈರಣ್ಣ ಬೆಂಗಾಲಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ, ತಾಲೂಕು ಪಂಚಾಯತ್ ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.