ಹುಬ್ಬಳ್ಳಿ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ಮತ್ತು ಡಾ.ಜಿ.ಪರಮೇಶ್ವರ ಅವರ ಬಣಗಳ ಸಮ್ಮಿಶ್ರ ಸರ್ಕಾರ ಇದೆ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಟೀಕಿಸಿದರು.
ಕಾಂಗ್ರೆಸ್ ಬಿಟ್ಟಿ ಭಾಗ್ಯಗಳನ್ನು ಘೋಷಣೆ ಮಾಡಿ ಜನಾದೇಶ ಪಡೆದಿದೆ.
ಈ ಸರ್ಕಾರ ಐದು ವರ್ಷ ಪೂರೈಸಬೇಕು ಎಂಬುದು ನಮ್ಮ ಅಪೇಕ್ಷೆ. ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ’ ಎಂದು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಒಳಜಗಳದಿಂದಾಗಿ ಸರ್ಕಾರ ಬೀಳುವ ಸಾಧ್ಯತೆ ಇದೆ. ಕಾದು ನೋಡೋಣ’ ಎಂದರು.
‘ವಿಜಯೇಂದ್ರ ಅವರ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಲು ಸಹಕಾರ ನೀಡುತ್ತೇವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಹುದ್ದೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡವರನ್ನು ಮನವೊಲಿಸಿ ಪಕ್ಷ ಸಂಘಟನೆ ಮಾಡುತ್ತೇವೆ’ ಎಂದು ಹೇಳಿದರು