ರಾಯಚೂರು. ದೇವದುರ್ಗ ತಾಲೂಕ ಆಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಸಾರಿಗೆ ಇಲಾಖೆ ಮತ್ತು ಪೊಲೀಸ್ ಇಲಾಖೆ ರವರ ಸಂಯೋಗದಲ್ಲಿ ದೇವದುರ್ಗ ತಾಲೂಕ ವ್ಯಾಪ್ತಿಯಲ್ಲಿ ಹತ್ತಿ ಹೊಲ ಮತ್ತು ಮೆಣಸಿನಕಾಯಿ ಹೊಲದಲ್ಲಿ ಹಠಾತ್‌ದಾಳಿ ಮಾಡಿದಾಗ ಮೆಣಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ೧೪ ವರ್ಷದೊಳಗಿನ ೦೮ ಬಾಲಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ದೇವದುರ್ಗರವರಿಗೆ ಒಪ್ಪಿಸಿ, ಪ್ರತಿ ನಿತ್ಯ ಶಾಲೆಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಯಿತು. ಹೊಲದ ಮಾಲೀಕರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಯಿತು.
ವಾಹನಗಳ ಮುಖಾಂತರ ಮಕ್ಕಳನ್ನು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿ, ಇಂದು ಸಂಜೆ ಗೂಡ್ಸ್ ವಾಹನಗಳಲ್ಲಿ ಹಿಂತಿರುಗುವ ಸಂದರ್ಭದಲ್ಲಿ ದೇವದುರ್ಗ ತಾಲೂಕಿನ ಸಿರವಾರ ಕ್ರಾಸ್, ಸುಂಕೇಶ್ವರಾಳ, ಗಬ್ಬೂರು ಮತ್ತು ದೇವದುರ್ಗ ಮುಖ್ಯರಸ್ತೆಯಲ್ಲಿ ವಾಹನಗಳ ತಪಾಸಣೆ ಮಾಡಿದ್ದು, ೧೩ ಮಕ್ಕಳನ್ನು ರಕ್ಷಣೆ ಮಾಡಿ ಪಾಲಕರಿಗೆ ಒಪ್ಪಿಸಿ, ಇನ್ನು ಮುಂದೆ ಯಾವುದೇ ಕಾರಣಕ್ಕೂ ಮಕ್ಕಳನ್ನು ಬಾಲಕಾರ್ಮಿಕತೆಯಲ್ಲಿ ತೊಡಗಿಸಲು ಕರೆದುಕೊಂಡು ಹೋಗಬಾರದೆಂದು ಜಾಗೃತಿ ಮೂಡಿಸಲಾಯಿತು.
ದಾಳಿ ತಂಡದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಆರತಿ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥರೆಡ್ಡಿ, ದೇವದುರ್ಗ ಕಾರ್ಮಿಕ ನಿರೀಕ್ಷಕ ಶಾಂತಮೂರ್ತಿ, ಶಿಕ್ಷಣ ಇಲಾಖೆ ಇಸಿಓ ರಾಜನಗೌಡ, ಸಾರಿಗೆ ನಿರೀಕ್ಷಕ ಬುಗ್ಗಾರೆಡ್ಡಿ, ಗ್ರಾಮ ಆಡಳಿತಾಧಿಕಾರಿ ವಿರೇಶ,ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತಿಕ್ಕಯ್ಯ, ಪೊಲೀಸ್ ಇಲಾಖೆಯ ಅಧಿಕಾರಿ ಚನ್ನಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ೨೦೧೬ ರಂತೆ ೧೪ ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ೧೫ ರಿಂದ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಒಂದು ವೇಳೆ ದುಡಿಸಿಕೊಂಡಲ್ಲಿ ರೂ. ೫೦,೦೦೦/- ದಂಡ ಹಾಗೂ ೨ ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ, ಕಾರಣ ಮಕ್ಕಳನ್ನು ದುಡಿಸಿಕೊಳ್ಳಬಾರದು.