ರಾಯಚೂರು:- ಮೇ.7ರಂದು ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನು ಚಲಾಯಿಸಬೇಕು ಮತ್ತು ಕರ್ತವ್ಯವನ್ನು ನಿಭಾಯಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸ್ವೀಪ್ ಸಮಿತಿಯ ಅಧ್ಯಕ್ಷರಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರಿಂದ ತ್ರಿಚಕ್ರ ವಾಹನದ ಮೂಲಕ ಮತದಾನ ಜಾಗೃತಿ ತ್ರಿಚಕ್ರ ವಾಹನಗಳ ಮೂಲಕ ಜಾಗೃತಿ ಜಾಥ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನವೆಂಬುವುದು ಪ್ರಜೆಗಳಿಗೆ ನೀಡಿದ ವಿಶೇಷ ಅಧಿಕಾರವಾಗಿದ್ದು, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದೆ. ದೇಶದ ಪ್ರತಿಯೊಬ್ಬರ ನಾಗರೀಕರು ಮತದಾನ ಮಾಡಿದಾಗ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.
ಮತದಾನ ಮಾಡುವುದು ಶ್ರೇಷ್ಠ ಕಾರ್ಯವಾಗಿದ್ದು, ಅದರಲ್ಲೂ ಮುಖ್ಯವಾಗಿ ವಿಕಲಚೇತನರು ಮತದಾನ ಮಾಡಲು ಮುಂದಾಗಬೇಕು. ಮೇ.7ರಂದು ನಡೆಯುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ ಮೂಲಕ ತಮ್ಮ ಅಧಿಕಾರ ಹಾಗೂ ಕರ್ತವ್ಯವನ್ನು ಪಾಲಿಸುವಂತೆ ತಿಳಿಸಿದರು.
ಇದೇ ವೇಳೆ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ರಾಯಚೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಶರಣಪ್ಪ ಪಾಟೀಲ್, ಮತದಾರರ ಸಾಕ್ಷರತಾ ಕ್ಲಬ್‌ನ ದಂಡಪ್ಪ ಬಿರಾದಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.