ರಾಯಚೂರು. ಜಿಲ್ಲಾಡಳಿತ ವತಿಯಿಂದ ಇದೇ ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಅಂದು ಬೆಳಿಗ್ಗೆ 9ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಕಾರ್ಯಕ್ರಮದ ಯಶಸ್ಸಿಗಾಗಿ ರಚಿಸಿದ ಸಮಿತಿಗಳು ತಮ್ಮ ಜವಾಬ್ದಾರಿಗೆ ಅನುಗುಣವಾಗಿ ಕೆಲಸ ಮಾಡಬೇಕು. ನಿಯಮ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ನಗರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಛತೆ ಹಾಗೂ ಅಲಂಕಾರಕ್ಕೆ ಹಾಗೂ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ನಗರಸಭೆಯಿಂದ ಅಗತ್ಯ ಕ್ರಮ ವಹಿಸಬೇಕು. ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಸಿಬ್ಬಂದಿಯೊಂದಿಗೆ ಆಂಬುಲೆನ್ಸ್, ಅಗ್ನಿಶಾಮಕ ಇಲಾಖೆಯಿಂದ ಅಗ್ನಿಶಾಮಕ ವಾಹನ ಒದಗಿಸಬೇಕೆಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ಶಂಕರಗೌಡ ಎಸ್.ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿರೇಶ ನಾಯಕ, ಜಿಲ್ಲಾ ಕೈಗಾರಿಕೆ ಅಧಿಕಾರಿ ಬಸವರಾಜ, ಆರ್.ಟಿ.ಒ ಅಧಿಕಾರಿ ವಿನಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗೂರು ಸೇರಿದಂತೆ ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.