ಕೊಪ್ಪಳ,ವಿಜಯನಗರ ಕಾಲುವೆ ಒಳಗೊಂಡಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಸೇರಿದಂತೆ ಬೆಳೆದು ನಿಂತ ಬೆಳೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು
ಬೆಂಗಳೂರಿನಲ್ಲಿ ತುಂಗಭದ್ರಾ ಯೋಜನೆಯ 120ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆ ಶುಕ್ರವಾರ ನಡೆಯಿತು. ತುಂಗಭದ್ರಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರು, ಸಂಸದರು, ಶಾಸಕರು ಹಾಗೂ ನೀರಾವರಿ ಸಲಹಾ ಸಮಿತಿ ಸದಸ್ಯರು, ಜಿಲ್ಲಾಧಿಕಾರಿಗಳು ಮತ್ತು ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ ಬಳಿಕ ಮಾತನಾಡಿದ ಸಚಿವರು, “ಜಲಾಶಯದ ನೀರಿನ ಸಾಮರ್ಥ್ಯ 10.151 ಟಿಎಂಸಿ ಇದ್ದು, ಈ ಪೈಕಿ ರಾಜ್ಯದ ಪಾಲು 2.481 ಟಿಎಂಸಿ, ಆಂಧ್ರಪ್ರದೇಶದ ಪಾಲು 2.851 ಟಿಎಂಸಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಹಂಚಿಕೆ ಮಾಡಲಾಗಿದೆ” ಎಂದರು. ನಾಲೆಗಳಿಗೆ ನೀರು ಹರಿಸಲು ತೀರ್ಮಾನ; ಸಭೆಯಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ, ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಹಾಗೂ ರಾಯ ಬಸವಣ್ಣ ಕಾಲುವೆಗೆ ನೀರು ಒದಗಿಸಲು ಕಾಲಾವಧಿ ನಿಗದಿಪಡಿಸಲಾಗಿದೆ. ಉಳಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ನೀರಿಗೆ ಬೇಡಿಕೆ ಇಟ್ಟಂತೆ ಕುಡಿಯಲು ನೀರು ಹರಿಸಲಾಗುವುದು. ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವೇ ಇಲ್ಲ ಎಂಬುದನ್ನು ಹೇಳಲಾಗಿದೆ. ನಿಂತ ಬೆಳೆಗೆ ನೀರು ಬಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಕುಡಿಯುವ ನೀರಿಗೆ ಕಾಯ್ದಿರಿಸಲಾದ 0.500 ಟಿಎಂಸಿ ಪೈಕಿ 0.300 ನೀರನ್ನು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಜನವರಿ 22ರಿಂದ ಏಪ್ರಿಲ್ 30ರವರೆಗೆ 60 ಕ್ಯೂಸೆಕ್ ಆನ್/ ಆಫ್‌ನಂತೆ (ಕುಡಿಯುವ ನೀರು ಒಳಗೊಂಡು) ಉಳಿದಂತೆ ರಾಯಚೂರು ಜಿಲ್ಲೆಗೆ ಹಂಚಿಕೆಯಾದ 1.200 ಟಿಎಂಸಿ ನೀರನ್ನು ಫೆಬ್ರವರಿ 15 ರಿಂದ ಫೆಬ್ರವರಿ 20ರವರೆಗೆ 0.600 ಟಿಎಂಸಿ ಮತ್ತು ಏಪ್ರಿಲ್ 10ರಿಂದ ಏಪ್ರಿಲ್ 20ರವರೆಗೆ 700 ಕ್ಯುಸೆಕ್‌ನಂತೆ 0.600 ಟಿಎಂಸಿ ನೀರನ್ನು ಕುಡಿಯುವ ಸಲುವಾಗಿ ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ. ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಜನವರಿ 21ರಿಂದ ಜನವರಿ 31ರವರೆಗೆ 100 ಕ್ಯೂಸೆಕ್‌ನಂತೆ ಮತ್ತು ಫೆಬ್ರುವರಿ 2024 ಮತ್ತು ಮಾರ್ಚ್ 2024 ತಿಂಗಳಲ್ಲಿ 10 ದಿನಗಳಿಗೊಮ್ಮೆ 100 ಕ್ಯುಸೆಕ್‌ನಂತೆ ಕುಡಿಯುವ ನೀರಿನ ಸಲುವಾಗಿ ಬಳ್ಳಾರಿ ನಗರ ಹಾಗೂ ಜಿಲ್ಲೆಯ ಇತರೆ ಕುಡಿಯುವ ನೀರಿನ ಯೋಜನೆಗೆ ಹಾಗೂ ಕೆರೆ ಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತದೆ. ರಾಯ ಬಸವಣ್ಣ ಕಾಲುವೆ. ವಿಜಯನಗರ ಜಿಲ್ಲೆಗೆ ಹಂಚಿಕೆಯಾದ 0.500 ಟಿಎಂಸಿ ನೀರಿನಲ್ಲಿ ಜನವರಿ 21ರಿಂದ ಮೇ.30ರವರೆಗೆ 100 ಕ್ಯುಸೆಕ್‌ನಂತೆ ಆನ್ ಆಫ್‌ನಂತೆ ಕುಡಿಯುವ ನೀರು ಹರಿಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ. ಡ್ಯಾಂ ಹೂಳೆತ್ತುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಹೂಳೆತ್ತಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ತಾಂತ್ರಿಕ ಸಮಿತಿ ವರದಿ ನೀಡಿದೆ. ಹಾಗಾಗಿ ಸಮಾನಾಂತರ ಜಲಾಶಯ ನಿರ್ಮಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಇದಕ್ಕೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯ ಕೂಡ ಒಪ್ಪಿಗೆ ನೀಡಬೇಕು. ಸಮಾನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು” ಎಂದರು.